ಬೆಂಗಳೂರು: ರಾಜ್ಯದ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರ (PHC) ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ (CHC) ಆಯಂಬುಲೆನ್ಸ್ ಸೌಲಭ್ಯ ಒದಗಿಸುವ ಉದ್ದೇಶದಿಂದ ಸರ್ಕಾರದಿಂದ ಶೀಘ್ರದಲ್ಲೇ ಹೊಸ 350 ಆಯಂಬುಲೆನ್ಸ್ಗಳನ್ನು ಖರೀದಿಸಲಾಗುತ್ತಿದೆ ಎಂದು ಸಚಿವ ಯು. ಟಿ. ಖಾದರ್ ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯಾದ್ಯಂತ 450 ಆಯಂಬುಲೆನ್ಸ್ಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಮೀಣ ಭಾಗದ ರೋಗಿಗಳಿಗೆ ತುರ್ತು ಚಿಕಿತ್ಸೆ ಸಿಗುವಂತೆ ಸೇವೆ ವಿಸ್ತರಿಸಲಾಗುವುದು. ಗ್ರಾಮೀಣ ಭಾಗದಿಂದ ಕರೆ ಬಂದ ತಕ್ಷಣ ಆಯಂಬುಲೆನ್ಸ್ಗಳು 20 ರಿಂದ 25 ನಿಮಿಷಗಳ ಒಳಗಾಗಿ ತಾಲೂಕು ಕೇಂದ್ರಗಳನ್ನು ತಲುಪಬೇಕು ಎಂಬುದು ಸರ್ಕಾರದ ನಿಯಮವಾಗಿದೆ. ಒಂದು ವೇಳೆ ನಿಗದಿತ ಸಮಯ ಪಾಲನೆ ಮಾಡದಿದ್ದಲ್ಲಿ ಮತ್ತು ಸೇವೆಯಲ್ಲಿ ವಿಳಂಬ ಧೋರಣೆ ತೋರಿದಲ್ಲಿ, ಆಯಂಬುಲೆನ್ಸ್ ಉಸ್ತುವಾರಿ ವಹಿಸಿಕೊಂಡಿರುವ ಸಂಸ್ಥೆ ಅಥವಾ ಸಿಬ್ಬಂದಿಗೆ 3,000 ರೂಪಾಯಿಗಳ ದಂಡ ವಿಧಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ವೈದ್ಯರ ಅಭಾವ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. 1,000 ವೈದ್ಯರ ಹುದ್ದೆಗಳ ಭರ್ತಿಗೆ ಸಚಿವ ಸಂಪುಟದಿಂದ ಒಪ್ಪಿಗೆ ದೊರೆತಿದೆ. ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಂಪೂರ್ಣ ಸಿಬ್ಬಂದಿ ನಿಯೋಜನೆಗೊಳ್ಳಬೇಕು ಎಂಬ ಉದ್ದೇಶದಿಂದ 250 ವೈದ್ಯರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಜಿಲ್ಲೆಗಳ ಸ್ಥಳೀಯ ಅಗತ್ಯಕ್ಕೆ ತಕ್ಕಂತೆ ಹೊರಗುತ್ತಿಗೆ ಆಧಾರದಲ್ಲಿ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.




























































