ಕಾರ್ಕಳ: ಶಿವಪುರ ಕೆರೆಬೆಟ್ಟು ಕೈಗಾರಿಕಾ ಪ್ರದೇಶಾಭಿವೃದ್ಧಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ, ಯೋಜನೆಯನ್ನು ಕೈಬಿಡುವ ಕುರಿತು ಶಾಸಕ ವಿ. ಸುನಿಲ್ ಕುಮಾರ್ ಅವರು ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪತ್ರದಲ್ಲಿ, ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆರೆಬೆಟ್ಟು ಮತ್ತು ಶಿವಪುರ ಗ್ರಾಮ ಹಾಗೂ ಬ್ರಹ್ಮಾವರ ತಾಲೂಕಿನ ಕಳ್ಳೂರು ಗ್ರಾಮದ ಒಟ್ಟು 390 ಭೂಮಾಲಕರ ಸುಮಾರು 263.49 ಎಕರೆ ಕೃಷಿ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕೈಗಾರಿಕಾ ಉದ್ದೇಶಕ್ಕಾಗಿ ಭೂಸ್ವಾಧೀನಪಡಿಸಿಕೊಳ್ಳಲು ಪ್ರಸ್ತಾಪಿಸಿ, ಸಂಬಂಧಪಟ್ಟ ಭೂಮಾಲೀಕರಿಗೆ ನೋಟಿಸ್ ಜಾರಿಗೊಳಿಸಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಸ್ಥಳೀಯ ಗ್ರಾಮ ಪಂಚಾಯತ್, ತಾಲೂಕು ಆಡಳಿತ, ಜಿಲ್ಲಾಡಳಿತ ಹಾಗೂ ಕ್ಷೇತ್ರದ ಸ್ಥಳೀಯ ಶಾಸಕರಾದ ನನ್ನ ಗಮನಕ್ಕೂ ಯಾವುದೇ ಪೂರ್ವ ಮಾಹಿತಿ ನೀಡದೆ, ಸ್ಥಳೀಯ ಜನಪ್ರತಿನಿಧಿಗಳು, ರೈತರು ಹಾಗೂ ಭೂಮಾಲೀಕರೊಂದಿಗೆ ಯಾವುದೇ ರೀತಿಯ ಸಮಾಲೋಚನೆ ಅಥವಾ ಸಭೆ ನಡೆಸದೆ ಏಕಾಏಕಿ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಿರುವುದನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ.
ಪ್ರಸ್ತುತ ಭೂಸ್ವಾಧೀನಕ್ಕೆ ಪ್ರಸ್ತಾಪಿಸಿರುವ ಪ್ರದೇಶದಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಒಳಗೊಂಡಿದ್ದು, ಅನೇಕ ಕುಟುಂಬಗಳು ತಲೆತಲಾಂತರಗಳಿಂದ ಕೃಷಿಯನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡು ಬದುಕು ಸಾಗಿಸುತ್ತಿವೆ. ಹಾಗೂ ಸ್ಥಳೀಯರ ಆರಾಧನಾ ಕೇಂದ್ರಗಳಾದ ದೈವಸ್ಥಾನಗಳು, ನಾಗಬನ ಹಾಗೂ ಜನರ ಧಾರ್ಮಿಕ ನಂಬಿಕೆಗಳಿಗೆ ಸಂಬಂಧಿಸಿದ ಪವಿತ್ರ ಸ್ಥಳಗಳಿವೆ. ಹಲವು ಕುಟುಂಬಗಳು ತಮ್ಮ ವಾಸದ ಮನೆಗಳು ಹಾಗೂ ಕೃಷಿ ಜಮೀನಿನೊಂದಿಗೆ ಭಾವನಾತ್ಮಕ ಸಂಬಂಧವನ್ನು ಹೊಂದಿರುವ ಜಮೀನನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಿಟ್ಟುಕೊಡಲು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಆದುದರಿಂದ ಯಾರ ಗಮನಕ್ಕೂ ಬಾರದೆ, ಯಾವುದೇ ಪೂರ್ವ ಮಾಹಿತಿ ನೀಡದೆ, ಸ್ಥಳೀಯ ಜನಪ್ರತಿನಿಧಿಗಳು, ರೈತರು ಹಾಗೂ ಭೂಮಾಲೀಕರೊಂದಿಗೆ ಯಾವುದೇ ರೀತಿಯ ಸಮಾಲೋಚನೆ ಅಥವಾ ಸಭೆ ನಡೆಸದೆ ಏಕಾಏಕಿ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಿರುವುದನ್ನು ಖಂಡಿಸುತ್ತಾ, ಸದ್ರಿ ಭೂಸ್ವಾಧೀನ ಪ್ರಕ್ರಿಯೆಯ ಪ್ರಸ್ತಾಪವನ್ನು ತಕ್ಷಣವೇ ಸ್ಥಗಿತಗೊಳಿಸಿ, ಯೋಜನೆಯನ್ನು ಕೈಬಿಡುವಂತೆ ಈ ಮೂಲಕ ತಮ್ಮಲ್ಲಿ ಕೋರುತ್ತೇನೆ ಎಂದು ಹೇಳಿದ್ದಾರೆ.




























































