ಕಾರ್ಕಳ : ಆಧುನಿಕ ಯುಗದಲ್ಲಿ ದೈಹಿಕ ಸದೃಢತೆ ಕಡಿಮೆಯಾಗುತ್ತಿದ್ದು ಕ್ರೀಡೆಯು ದೈಹಿಕವಾಗಿ ಸದೃಢರನ್ನಾಗಿಸುವುದರ ಜೊತೆಗೆ ಶಿಸ್ತು, ಸಮಯ ಪ್ರಜ್ಞೆ, ನಾಯಕತ್ವ ಗುಣವನ್ನು ಬೆಳೆಸುತ್ತದೆ ಎಂದು ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕ್ರೀಡಾ ನಿರ್ದೇಶಕ ಡಾ.ಗಣೇಶ್ ಪೂಜಾರಿ ಹೇಳಿದರು.
ಅವರು ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿ ಕುದುರೆಮುಖ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ. ಡಿ. ದಿನೇಶ್ ಮಾತನಾಡಿ, ಆರೋಗ್ಯಕರ ಮತ್ತು ಕ್ರಿಯಾಶೀಲರಾಗಲು ಕ್ರೀಡೆ ನೆರವಾಗುತ್ತದೆ. ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಲು ಸ್ಫೂರ್ತಿಯಾಗಿದೆ. ಕ್ರೀಡೆಯಿಂದ ಯಶಸ್ಸಿನ ಉತ್ತುಂಗಕ್ಕೆ ಏರಲು ಸಾಧ್ಯ ಎಂದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ.ಕೊಡವೂರು ಮಾತನಾಡಿ, ಕ್ರೀಡೆಯು ಸೋಲೇ ಗೆಲುವಿನ ಮೆಟ್ಟಿಲು ಎಂಬ ಅರಿವನ್ನು ಮೂಡಿಸುತ್ತದೆ. ಗೆದ್ದಾಗ ಅತಿಯಾಗಿ ಹಿಗ್ಗದೆ, ಕ್ರೀಡೆಯು ಸೋತಾಗ ಕುಗ್ಗದೆ ಜೀವನದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆಯನ್ನು ಬೆಳೆಸುತ್ತದೆ ಎಂದರು.
ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನೆರವೇರಿತು. ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳನ್ನು ಅಭಿನಂದಿಸಲಾಯಿತು.
ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮದ್ಬುವನೇಂದ್ರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಂಜಯ್ ಕುಮಾರ್ ಮಾತನಾಡಿ, ಯೋಗಾಭ್ಯಾಸ ಮಾಡುವುದರಿಂದ ಮನಸ್ಸನ್ನು ಏಕಾಗ್ರತೆಯಿಂದ ಇರಿಸಿಕೊಳ್ಳಲು ಸಾಧ್ಯವಾಗುತ್ತದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಬೆಳಿಗ್ಗೆ ವ್ಯಾಯಾಮ ಮಾಡುವುದು ಅತ್ಯಂತ ಅಗತ್ಯ. ಸೋಲಿನಿಂದ ಬೇಸರಗೊಳ್ಳದೆ, ಅದನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು.
ವೇದಿಕೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪ ಪ್ರಾಂಶುಪಾಲೆ ವಾಣಿ ಕೆ., ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಹಿತೈಷಿಗಳಾದ ತ್ರಿವಿಕ್ರಮ ಕಿಣಿ, ದೇವೇಂದ್ರ ನಾಯಕ್ , ಕುಕ್ಕುಂದೂರು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ರೆಹಮತುಲ್ಲ ಉಪಸ್ಥಿತರಿದ್ದರು.
ವಿದ್ಯಾರ್ಥಿ ಮನೀಶ್ ಪ್ರಾರ್ಥಿಸಿ, ಸಹಶಿಕ್ಷಕಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.





























































