ಮಹಾಮಸ್ತಕಾಭಿಷೇಕ : ತಾ.ಪಂ. ಸಭಾಂಗಣದಲ್ಲಿ ಪೂರ್ವಭಾವಿ ಸಭೆ

ಕೇಂದ್ರ ಸಚಿವ ಅಮಿತ್‌ ಶಾ, ಸಿಎಂ ಡಿಕೆಶಿ ಭಾಗವಹಿಸುವ ಸಾಧ್ಯತೆ

ಕಾರ್ಕಳ : ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು ಪ್ರತಿಯೊಂದು ಕಾರ್ಯವೂ ಸುಸೂತ್ರವಾಗಿ ನೆರವೇರುವ ನಿಟ್ಟಿನಲ್ಲಿ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.

ಅವರು ಸೋಮವಾರ ತಾ.ಪಂ. ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಮಹೋತ್ಸವದ ಸಂದರ್ಭದಲ್ಲಿ ನಗರದಲ್ಲಿನ ವಾಹನ ದಟ್ಟಣೆ, ಪಾರ್ಕಿಂಗ್‌ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತಾ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಪೊಲೀಸ್, ಲೋಕೋಪಯೋಗಿ ಇಲಾಖೆ ಹಾಗೂ ಪುರಸಭೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ರಚಿಸಿ ಅದರ ಉಸ್ತುವಾರಿಯನ್ನು ಅಧಿಕಾರಿಗಳಿಗೆ ವಹಿಸಬೇಕೆಂದರು.

ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಗಾಗಿ 100 ಮಂದಿ ಸಿಬ್ಬಂದಿಯನ್ನು ನಿಯೋಜಿಸಬೇಕು. ಎಸ್‌ಎಲ್‌ಆರ್‌ಎಂ ಘಟಕ ಹಾಗೂ ಗ್ರಾಮ ಪಂಚಾಯತ್‌ಗಳ ಸಹಕಾರ ಪಡೆಯಬೇಕು ಎಂದರು.

ಆರೋಗ್ಯ ಇಲಾಖೆ 24 ಗಂಟೆಯೂ ಸೇವೆ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಮೂರು ಪಾಳಿಗಳಲ್ಲಿ ಸಿಬ್ಬಂದಿ ನಿಯೋಜಿಸಬೇಕೆಂದು ತಾಲೂಕು ಆರೋಗ್ಯಾಧಿಕಾರಿಗೆ ತಿಳಿಸಿದರು. ಅಗ್ನಿಶಾಮಕ ಇಲಾಖೆಯಿಂದ ಬೆಂಗಳೂರಿನಿಂದ ಹೆಚ್ಚುವರಿ ನಾಲ್ಕು ವಾಹನಗಳನ್ನು ತರಿಸಿಕೊಳ್ಳುವಂತೆಯೂ, ತುರ್ತು ಸಂದರ್ಭಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆಯೂ ಅಗ್ನಿಶಾಮಕ ದಳದ ಅಧಿಕಾರಿಗೆ ಸೂಚಿಸಿದರು.

ರಜೆ ನೀಡಿ
ಮಹೋತ್ಸವದ ಪ್ರಮುಖ ದಿನಗಳಾದ 24, 25 ಮತ್ತು 26ರಂದು ಕಾರ್ಕಳ ಹೆಬ್ರಿ ತಾಲೂಕಿನ ಶಾಲೆಗಳಿಗೆ ರಜೆ ಸಾರುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲಿಸಬೇಕು. ಶಾಲಾ-ಕಾಲೇಜುಗಳ ಸಹಕಾರದೊಂದಿಗೆ ಮಕ್ಕಳ ಕಾರ್ಯಕ್ರಮಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು. ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಗಳು ವಸ್ತುಪ್ರದರ್ಶನ ಆಯೋಜಿಸಬೇಕು. ಮೆಸ್ಕಾಂನ ನಿಟ್ಟೆ ಮತ್ತು ಕಾರ್ಕಳ ವಿಭಾಗದ ಎಇಇಗಳು ಜಂಟಿಯಾಗಿ ಬೀದಿದೀಪ ಹಾಗೂ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕೆಂದರು.

ಪ್ರತಿಯೊಂದು ಇಲಾಖೆಯೂ ಪ್ರತ್ಯೇಕವಾಗಿ ಸಿದ್ಧತೆ ಪರಿಶೀಲಿಸಿ, ವಾರಕ್ಕೊಮ್ಮೆ ಸಭೆ ನಡೆಸೋಣ. ಮುಂದಿನ ಸಭೆಗೆ ಅಧಿಕಾರಿಗಳು ತಮ್ಮ ಇಲಾಖೆಯ ಕಾರ್ಯಯೋಜನೆ ಹಾಗೂ ಸಿದ್ಧತೆಗಳ ವಿವರದೊಂದಿಗೆ ಹಾಜರಾಗಬೇಕು. ಯಾವುದೇ ಹಂತದಲ್ಲಿ ಸಮನ್ವಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

12 ವರ್ಷಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕದಲ್ಲಿ ನಾವೆಲ್ಲ ತೊಡಗಿಸಿಕೊಳ್ಳುತ್ತಿರುವುದು ಒಂದು ಅವಕಾಶವಾಗಿದೆ. ಈ ಅವಕಾಶವನ್ನು ಸಮರ್ಥಕವಾಗಿ ಬಳಸಿಕೊಂಡು ಎಲ್ಲೂ ಲೋಪವಾಗದಂತೆ ಅವಶ್ಯ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಹೇಳಿದರು.

ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಐತಿಹಾಸಿಕ ಮಸ್ತಕಾಭಿಷೇಕವನ್ನು ಯಶಸ್ವಿಗೊಳಿಸಲು ಸರಕಾರ, ಜಿಲ್ಲಾಡಳಿತ, ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಎಲ್ಲ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಿ, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಎಲ್ಲರೂ ಕೈಜೋಡಿಸಬೇಕೆಂದು ವಿನಂತಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ಮಹೋತ್ಸವದ ಸಂದರ್ಭದಲ್ಲಿ ಸಂಚಾರ ನಿಯಂತ್ರಣ ದೊಡ್ಡ ಸವಾಲಾಗಲಿದ್ದು, ನಾಲ್ಕು ಜಿಲ್ಲೆಗಳ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಬಂದೋಬಸ್ತ್ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದರು.

ಸಭೆಯಲ್ಲಿ ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್, ಸಹಾಯಕ ಆಯುಕ್ತ ಮಹೇಶ್ ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಹಾಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕಿ ಚೇತನಾ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.





























































































































error: Content is protected !!
Scroll to Top