ಪ್ರತಿಭಟನೆ ಕೈ ಬಿಡುವಂತೆ ಆಶಾ ಕಾರ್ಯಕರ್ತೆಯರ ಬಳಿ ಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಕೈಬಿಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಅವರ ಬೇಡಿಕೆಗಳಿಗೆ ಸರ್ಕಾರ ಖಂಡಿತ ಪರಿಹಾರ ಕಂಡುಕೊಳ್ಳಲಿದೆ ಎಂದು ಭರವಸೆ ನೀಡಿರುವ ಅವರು, ಈ ವಿಚಾರವನ್ನು ಸರ್ಕಾರದೊಂದಿಗೆ ಸಂಘರ್ಷದ ವಿಷಯವನ್ನಾಗಿ ಮಾಡಿಕೊಳ್ಳಬಾರದು ಎಂದು ಕೋರಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಅವರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಪ್ರತಿಭಟನೆ ಹಿಂಪಡೆಯಿರಿ. ಇದನ್ನು ಪ್ರತಿಷ್ಠೆಯ ವಿಚಾರವನ್ನಾಗಿ ಮಾಡಿಕೊಳ್ಳುವ ಹಠ ಬಿಡಿ. ನಾವು ನಿಮ್ಮ ಪರವಾಗಿದ್ದೇವೆ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದು, ಹಣಕಾಸು ಇಲಾಖೆಯೊಂದಿಗೆ ಮತ್ತಷ್ಟು ಸಮಾಲೋಚನೆ ನಡೆಸುವುದಾಗಿ ಹೇಳಿದರು. ಈಗಾಗಲೇ ಐದರಿಂದ ಆರು ಸುತ್ತಿನ ಮಾತುಕತೆಗಳು ನಡೆದಿವೆ ಎಂದರು.

ನನ್ನ ತಾಯಂದಿರು, ಸಹೋದರಿಯರಲ್ಲಿ ವಿನಮ್ರವಾಗಿ ಮನವಿ ಮಾಡಿಕೊಳ್ಳುತ್ತೇನೆ. ನಮ್ಮ ಮೇಲೆ ನಂಬಿಕೆ ಇಡಿ. ನಿಮ್ಮ ಸಮಸ್ಯೆಗೆ ಖಂಡಿತ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದು, ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಗಂಭೀರವಾದ ಆರ್ಥಿಕ ಪರಿಣಾಮಗಳನ್ನು ಹೊಂದಿವೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಇತರ ವರ್ಗದ ನೌಕರರೂ ಇದೇ ರೀತಿಯ ಬೇಡಿಕೆಗಳನ್ನು ಮುಂದಿಡುತ್ತಿದ್ದಾರೆ ಎಂದು ಅವರು ಹೇಳಿದರು.

ಎಲ್ಲರೂ ಬೀದಿಗಿಳಿದು ಪ್ರತಿಭಟನೆ ನಡೆಸಿದರೆ, ಜವಾಬ್ದಾರಿ ಹೊರುವವರು ಯಾರು? ಪ್ರತಿಯೊಬ್ಬರ ಜೀವನೋಪಾಯವೂ ನಮಗೆ ಮುಖ್ಯವಾಗಿದೆ’.ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಿದ್ದ ಭರವಸೆಯನ್ನು ರಾಜ್ಯ ಸರ್ಕಾರ ಈಡೇರಿಸಿದೆ. ಮುಂದೆಯೂ ಅವರ ನೆರವಿಗೆ ನಿಲ್ಲಲಿದೆ. ನಿರುದ್ಯೋಗಿ ಯುವಕರಿಗೆ ಪರಿಹಾರ ನೀಡುವ ಯೋಜನೆಯನ್ನು ಹೊರತುಪಡಿಸಿ, ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯಲು ಆಶಾ ಕಾರ್ಯಕರ್ತೆಯರಿಗೆ ಅವಕಾಶ ನೀಡಲಾಗಿದೆ ಎಂದರು.

ಆಶಾ ಕಾರ್ಯಕರ್ತೆಯರ ವಿಚಾರ ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಕೇಂದ್ರ ತನ್ನ ಕೊಡುಗೆಯನ್ನು ಹೆಚ್ಚಿಸಿಲ್ಲ. ಅದು ಅವರಿಗೆ ಅತ್ಯಲ್ಪ ಮೊತ್ತ ನೀಡುತ್ತಿದೆ. ಆದರೆ ಕರ್ನಾಟಕ ಸರ್ಕಾರ ಗಣನೀಯ ಮೊತ್ತವನ್ನು ಒದಗಿಸುತ್ತಿದೆ’ ಎಂದು ಹೇಳಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಈ ಯೋಜನೆ ಆರಂಭವಾಗಿತ್ತು ಎಂದು ಸ್ಮರಿಸಿದ ಶಿವಕುಮಾರ್, ರಾಜ್ಯ ಸರ್ಕಾರವೇ ಹೆಚ್ಚಿನ ಆರ್ಥಿಕ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿದೆ ಎಂದರು. ಆಶಾ ಕಾರ್ಯಕರ್ತೆಯರಿಲ್ಲದಿದ್ದರೂ ಸರ್ಕಾರ ಕೆಲಸ ನಿರ್ವಹಿಸಬಹುದು ಎಂಬ ಅಭಿಪ್ರಾಯವನ್ನು ತಳ್ಳಿಹಾಕಿದ ಅವರು, ನಮಗೆ ಎಲ್ಲರೂ ಬೇಕು. ಪ್ರತಿಯೊಬ್ಬರ ಅಗತ್ಯವೂ ಇದೆ ಎಂದರು.

“ಅವರು ಕಾರ್ಯಕರ್ತೆಯರಾಗಿರಬಹುದು. ಆದರೆ ಅಂತಿಮವಾಗಿ ಅವರು ದೇಶದ ಸೇವೆ ಮಾಡುತ್ತಿದ್ದಾರೆ” ಎಂದು ಹೇಳಿದ ಅವರು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರಕ್ಕೆ ಇನ್ನಷ್ಟು ಸಮಯ ನೀಡುವಂತೆ ಮನವಿ ಮಾಡಿದರು.

ನೆಲಮಂಗಲ ಸೇರಿದಂತೆ ವಿವಿಧೆಡೆ ಆಶಾ ಕಾರ್ಯಕರ್ತೆಯರನ್ನು ಖುದ್ದಾಗಿ ಭೇಟಿಯಾಗಿದ್ದು, ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.





























































































































error: Content is protected !!
Scroll to Top